ಆದಿಪರ್ವ

ಪೀಠಿಕಾ ಸಂಧಿ
ಶ್ರೀ ವನಿತೆಯರಸನೆವಿಮಲ ರಾ
ಜೀವ ಪೀಠನ ಪಿತನೆ ಜಗತಿ
ಪಾವನನೆ ಸನಕಾದಿ ಸಜ್ಜನಿಕರ ದಾತಾರ
ರಾವಣಾಸುರ ಮಥನ ಶ್ರವಣ ಸು
ಧಾ ವಿನೂತನ ಜನದ ಗದುಗಿನ ವೀರನಾರಾಯಣ ೧

ಶರಣ ಸಂಗವ್ಯಸನ ಭುಜಗಾ
ಭರಣನಮರ ಕಿರೀಟ ಪಂಡಿತ
ಚರಣ ಚಾರುಚರಿತ್ರ ನಿರುಪಮ ಭಾಳಶಿಖಿನೇತ್ರ
ಕರಣನಿರ್ಮಲ ಭಜಕರಘ ಸಂ
ಹರಣ ದಂತಿ ಚಮೂರು ಚರ್ಮಾಂ
ಬರನೆ ಸಲಹುಗೆ ಭಕುತ ಜನರನು ಪಾರ್ವತೀರಮಣ ೨

ವರಮಣಿಗಳಿಂದೆಸೆವ ಮೌಳಿಯ
ಸರಸಿಜಾರಿಯ ಕಿರಣದೋಳಿಯ
ವಿರಚಿಸಿದ ಸಿಂಧೂರಭಾಳದಿ ಕುಣಿವ ಕುಂತಳದ
ಕವಿ ನಿಭಾಕೃತಿಯೆನಿಪ ವದನದ
ಕರದ ಪಾಶದ ಮೋದಕದ ವಿ
ಸ್ವರದ ಗಣಪತಿ ಮಾಡೆಮಗೆ ನಿರ್ವಿಘ್ನದಾಯಕವ ೩

ಗಜಮುಖನೆ ಮೆರೆವೇಕದಂತನೆ
ನಿಜಗುಣಾನ್ವಿತ ಪರಶುಧಾರನೆ
ರಜತಗಿರಿಗೊಡೆಯನ ಕುಮಾರನೆ ವಿಧ್ಯೆವಾರಿಧಿಯೆ
ಅಜನು ಹರಿ ರುದ್ರಾದಿಗಳು ನೆರೆ
ಭಜಿಸುತಿಹರನವರತ ನಿನ್ನನು
ತ್ರಿಜಗವಂದಿತ ಗಣಪ ಮಾಳ್ಪುದು ಮತಿಗೆ ಮಂಗಳವ ೪

ವಾರಿಜಾಸನೆ ಸಕಲಶಾಸ್ತ್ರ ವಿ
ಚಾರದುದ್ಭವೆ ವಚನರಚನೋ
ದ್ಧಾರೆ ಶೃತಿ ಪೌರಾಣದಾಗಮ ಸಿದ್ಧಿದಾಯಕಿಯೆ
ಶೌರಿ ಸುರಪತಿ ಸಕಲ ಮುನಿಜನ
ಸೂರಿಗಳಿಗನುಪಮದ ಯುಕುತಿಯೆ
ಶಾರದೆಯೆ ನರ್ತಿಸುಗೆ ನಲಿದೊಲಿದೆನ್ನ ಜಿಹ್ವೆಯಲಿ ೫

ಆದಿ ನಾರಾಯಣಿ ಪರಾಯಣಿ
ನಾದಮಯೆ ಗಜಲಕ್ಷ್ಮಿ ಸತ್ವಗು
ಣಾಧಿದೇವತೆ ಅಮರ ವಂದಿತ ಪಾದಪಂಕರುಹೆ
ವೇದಮಾತೆಯೆ ವಿಶ್ವತೋಮುಖೆ
ಯೈದು ಭೂತಾಧಾರಿಯೆನಿಪೀ
ದ್ವಾದಶಾತ್ಮ ಜ್ಯೋತಿರೂಪಿಯೆ ನಾದೆ ಶಾರದೆಯೆ ೬

ವೀರನಾರಾಯಣನೆ ಕವಿ ಲಿಪಿ
ಕಾರ ಕುವರವ್ಯಾಸ ಕೇಳುವ
ಸೂರಿಗಳು ಸನಕಾದಿಗಳು ಜಂಗಮ ಜನಾರ್ದನರು
ಚಾರುಕವಿತೆಯ ಬಳಕೆಯಲ್ಲ ವಿ
ಚಾರಿಸುವಡಳವಲ್ಲ ಚಿತ್ತವ
ಧಾರು ಹೋ ಸರ್ವಜ್ಞರಾದರು ಸಲುಗೆ ಬಿನ್ನಪವ ೭

ಶ್ರೀಮದಮರಾಧೀಶ ನತಪದ
ತಾಮರಸ ಘನವಿಪುಳ ನಿರ್ಮಲ
ರಾಮನನುಪಮ ಮಹಿಮೆ ಸನ್ಮುನಿ ವಿನುತ ಜಗಭರಿತ
ಶ್ರೀಮದೂರ್ಚಿತ ಧಾಮ ಸುದಯಾ
ನಾಮನಾಹವ ಭೀಮ ರಘುಕುಲ
ರಾಮ ರಕ್ಷಿಸುವೊಲಿದು ಗದುಗಿನ ವೀರನಾರಾಯಣ ೮

ಶರಧಿಸುತೆ ಸನಕಾದಿ ವಂದಿತೆ
ಸುರನರೋರಗ ಮಾತೆ ಸುಜನರ
ಪೊರೆವ ದಾತೆ ಸುರಾಗ್ರಗಣ್ಯಸುಮೌನಿ ವರಸ್ತುತ್ಯೆ
ಪರಮ ಕರುಣಾ ಸಿಂಧು ಪಾವನ
ಚರಿತೆ ಪದ್ಮಜ ಮುಖ್ಯ ಸಕಲಾ
ಮರ ಸುಪೂಜಿತೆ ಲಕ್ಷ್ಮಿ ಕೊಡುಗೆಮಗಧಿಕ ಸಂಪದವ ೯

ಗಜಮುಖನ ವರಮಾತೆ ಗೌರಿಯೆ
ತ್ರಿಜಗದರ್ಚಿತ ಚಾರು ಚರಣಾಂ
ಬುಜೆಯ ಪಾವನಮೂರ್ತಿ ಪದ್ಮಜಮುಖ್ಯ ಸುರಪೂಜ್ಯೆ
ಭಜಕರಘ ಸಂಹರಣೆ ಸುಜನ
ವ್ರಜ ಸುಸೇವಿತ ಮಹಿಷ ಮರ್ದಿನಿ
ಭುಜಗ ಭೂಷಣನರಸಿ ಕೊಡು ಕಾರುಣ್ಯದಲಿ ಮತಿಯ ೧೦

ದುರಿತಕುಲಗಿರಿ ವಜ್ರದಂಡನು
ಧರೆಯ ಜಂಗಮ ಮೂರ್ತಿ ಕವಿ ವಾ
ರಿರುಹ ದಿನಮಣಿ ನಿಖಿಲ ಯತಿಪತಿ ದಿವಿಜವಂದಿತನು
ತರಳನನು ತನ್ನವನೆನುತೆ ಪತಿ
ಕರಿಸಿ ಮಗನೊಲಿದು ಕರುಣದಿ
ವರವನಿತ್ತನು ದೇವ ವೇದವ್ಯಾಸ ಗುರುರಾಯ ೧೧

ವಂದಿತಾಮಳ ಚರಿತನಮರಾ
ನಂದ ಯದುಕುಲ ಚಕ್ರವರ್ತಿಯ
ಕಂದ ನತ ಸಂಸಾರ ಕಾನನ ಘನ ದವಾನಳನು
ನಂದನಂದನ ಸನ್ನಿಭನು ಸಾ
ನಂದದಿಂದಲೇ ನಮ್ಮುವನು ಕೃಪೆ
ಯಿಂದ ಸಲಹುಗೆ ದೇವ ಜಗದಾರಾಧ್ಯ ಗುರುರಾಯ ೧೨

ತಿಳಿದು ಹೇಳುವೆ ಕೃಷ್ಣ ಕಥೆಯನು
ಇಳೆಯ ಜಾಣರು ಮೆಚ್ಚುವಂತಿರೆ
ನೆಲೆಗೆ ಪಂಚಮ ಶ್ರುತಿಯನೊರೆವೆನು ಕೃಷ್ಣ ಮೆಚ್ಚಲಿಕೆ
ಹಲವು ಜನ್ಮದ ಪಾಪರಾಶಿಯ
ತೊಳೆವ ಜಲವಿದು ಶ್ರೀಮದಾಗಮ
ಕುಲಕೆ ನಾಯಕ ಭರತಾಕೃತಿ ಪಂಚಮ ಶ್ರುತಿಯ ೧೩

ಪದದ ಪ್ರೌಢಿಯ ನವರಸಂಗಳ
ವುದಿತವೆನುವಭಿದಾನ ಭಾವವ
ಬೆದಕಲಾಗದು ಬಲ್ಲ ಪ್ರೌಢರುಮೀ ಕಥಾಂತರಕೆ
ಇದ ವಿಚಾರಿಸೆ ಬಱಿಯ ತೊಳಸಿಯ
ವುದಕದಂತಿರೆಯಿಲ್ಲಿ ನೋಳ್ಪುದು
ಪದುಮನಾಭನ ಮಹಿಮೆ ಧರ್ಮವಿಚಾರ ಮಾತ್ರವನು ೧೪

ಹಲಗೆ ಬಳಪವ ಪಿಡಿಯದೊಂದ
ಗ್ಗಳಿಕೆ ಪರರೊಡ್ದವದ ರೀತಿಯ ಕೊಳ್ಳದಗ್ಗಳಿಕೆ
ಬಳಸಿ ಬರೆಯಲು ಕಂಠಪತ್ರದ
ವುಲುಹುಗೆಡದಗ್ಗಳಿಕೆಯೆಂಬೀ
ಬಲುಹು ಗದುಗಿನ ವೀರನಾರಾಯಣನ ಕಿಂಕರಿಗೆ ೧೫

ಕೃತಿಯನವಧರಿಸುವುದು ಸುಕವಿಯ
ಮತಿಗೆ ಮಂಗಳವೀವುದಧಿಕರು
ಮಥಿಸುವುದು ತಿದ್ದುವುದು ಮೆರೆವುದು ಲೇಸ ಸಂಚಿಪುದು
ನುತಗುಣರು ಭಾವುಕರು ವರಪಂ
ಡಿತರು ಸುಜನರು ಸೂಕ್ತಿಕಾರರೌ
ಮತಿಯನೀವುದು ವೀರನಾರಾಯಣನ ಕಿಂಕರಿಗೆ ೧೬

ತಿಣಿಕೆ‌ಇದೆನು ಫಣಿರಾಯ ರಾಮಾ
ಯಣದ ಕವಿಗಳ ಭಾರದಲಿ ತಿಂ
ತಿಣಿಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ
ಬಣಗು ಕವಿಗಳ ಲೆಕ್ಕಿಪನೆ ಸಾ
ಕೆಣಿಸದಿರು ಶುಕರೂಪನಲ್ಲವೆ
ಕುಣಿಸಿ ನಗನೇ ಕವಿಕುಮಾರವ್ಯಾಸನುಳಿದವರ ೧೭

ಹರಿಯಬಸುರೊಳಗಖಿಳ ಲೋಕದ
ವಿರಡವಡಗಿಹವೋಲು ಭಾರತ
ಶರಧಿಯೊಳಗಡಗಿಹವನೇಕ ಪುರಾಣ ಶಾಸ್ತ್ರಗಳು
ಪರಮ ಭಕ್ತಿಯಲೀ ಕೃತಿಯನವ
ಧರಿಸಿ ಕೇಳ್ಪಾ ನರರ ಬೇಗೆಯೆಂದರುಹಿದನು ಮುನಿನಾಥ ೧೮

ಅರಸುಗಳಿಗಿದು ವೀರ ದ್ವಿಜರಿಗೆ
ಪರಮ ವೇದದ ಸಾರ ಯೋಗೀ
ಶ್ವರರ ತತ್ವವಿಚಾರ ಮಂತ್ರಿಜನಕೆ ಬುದ್ದಿಗುಣ
ವಿರಹಿಗಳ ಶೃಂಗಾರ ವಿದ್ಯಾ
ಪರಿಣತರಲಂಕಾರ ಕಾವ್ಯಕೆ
ಗುರುವೆನಲು ರಚಿಸಿದ ಕುಮಾರವ್ಯಾಸ ಭಾರತವ ೧೯

ವೇದ ಪಾರಾಯಣಾದ ಫಲ ಗಂ
ಗಾದಿ ತೀರ್ಥಸ್ನಾನ ಫಲ ಕೃ
ಚ್ಚ್ರಾದಿ ತಪಸಿನ ಫಲವು ಜ್ಯೋತಿಷ್ಟೋಮಯಾಗ ಫಲ
ಮೇದಿನಿಯನೊಲಿದಿತ್ತ ಫಲ ವ
ಸ್ತ್ರಾದಿ ಕನ್ಯಾದಾನ ಫಲವಹು
ದಾದರಿಸಿ ಭಾರತದೊಳೊಂದಕ್ಷರವ ಕೇಳ್ಪರಿಗೆ ೨೦

ಹೇಮ ಖುರ ಶೃಂಗಾರಭರಣದಲಿ
ಕಾಮಧೇನು ಸಹಸ್ರ ಕಪಿಲೆಯ
ಸೋಮ ಸೂರ್ಯ ಗ್ರಹಣದಲಿ ಸುರನದಿಯ ತೀರದಲಿ
ಶ್ರೀಮುಕುಂದಾರ್ಪಣವೆನಿಸಿ ಶತ
ಭೂಮಿದೇವರಿಗಿತ್ತಫಲವಹು
ದೀ ಮಹಾ ಭಾರತದೊಳೊಂದಕ್ಷರವ ಕೇಳ್ಪರಿಗೆ ೨೧

ಚೋರ ನಿಂದಿಸಿ ಶಶಿಯ ಬೈದಡೆ
ಕ್ಷೀರವನು ಕ್ಷಯರೋಗಿ ಹಳಿದರೆ
ವಾರಣಾಸಿಯ ಹೆಲವ ನಿಂದಿಸಿ ನಕ್ಕರೇನಹುದು
ಭಾರತದ ಕಥನ ಪ್ರಸಂಗವ
ಕ್ರೂರ ಕರ್ಮಿಗಳೆತ್ತ ಬಲ್ಲರು
ಘೋರರೌರವವನ್ನು ಕೆಡಿಸುಗು ಕೇಳ್ದ ಸಜ್ಜನರ ೨೨

ವೇದಪುರುಷನ ಸುತನ ಸುತನ ಸ
ಹೋದರನ ಹೆಮ್ಮಗನ ಮಗನ ತ
ಳೋದರಿಯ ಮಾತುಳನ ರೂಪನತುಳನ ಭುಜಬಲದಿ
ಕಾದಿ ಗೆಲಿದನನಣ್ಣನವ್ವೆಯ
ನಾದಿನಿಯ ಜಠರದಲಿ ಜನಿಸಿದ
ನಾದಿ ಮೂರುತಿ ಸಲಹೊ ಗದುಗಿನ ವೀರನಾರಾಯಣ ೨೩


ಅತ್ಯಂತ ಸಂತೊಷದ ಸಂಗತಿಯೆಂದರೆ ಹಳಗನ್ನಡ ಮಹಾಕಾವ್ಯಗಳನ್ನು ಪ್ರಕಟಿಸಿ ಎಂದು ಕೋರಿ ನಮಗೆ ಒಂದಷ್ಟು ಈಮೈಲ್‌ಗಳು ಬಂದವು. ಡಿವಿಜಿಯವರ ‘ಮಂಕುತಿಮ್ಮನಕಗ್ಗ’ ವನ್ನು ಜರ್ಮನಿಯಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್ರಾದ ಶ್ರೀ ಪ್ರಸನ್ನರವರು ಪ್ರಸ್ತಾಪಿಸಿದ್ದರು. ಎ.ಆರ್.ಕೃಷ್ಣಶಾಸ್ತ್ರಿಯವರ ‘ವಚನಭಾರತ’ ಓದುವ ಬಯಕೆಯನ್ನು ಮುಂದಿಟ್ಟಿದ್ದರು. ಅದರ ಸಾಧ್ಯತೆಯನ್ನು ಪರಿಶೀಲಿಸುತ್ತಿರುವಾಗ ಕುಮಾರವ್ಯಾಸಭಾರತ ಏಕೆ ಪ್ರಕಟಿಸಬಾರದು ಎಂದು ಕೆಲ ಮಿತ್ರರು ಸಲಹೆ ನೀಡಿದರು. ವ್ಯಾಸಭಾರತ ಗಾತ್ರದಲ್ಲಿ ದೊಡ್ಡದು. ಅದನ್ನೆಲ್ಲ ಇಡಿಯಾಗಿ ಪ್ರಕಟಿಸಲು ಸಾಧ್ಯವಿಲ್ಲದಿದ್ದರು‌ಆ ದಿಕ್ಕಿನಲ್ಲಿ ಪ್ರಯತ್ನ ಪಡಬಾರದೇಕೆ ಎಂದು ಹೊರಟಿದ್ದೇವೆ. ಸಮಯವಿದ್ದಾಗಲೆಲ್ಲ ಈ ಕೃತಿಯನ್ನು ಕಂತಿನಲ್ಲಿ ಸೇರಿಸುತ್ತ ಬರುವ ಆಲೋಚನೆ ನಮ್ಮದು. ಸಾಫ್ಟ್‌ವೇರ್ ಇಂಜಿನಿಯರಿಂಗ್‌ಗೂ ಕನ್ನಡ ಸಾಹಿತ್ಯಕ್ಕೂ ಸಂಬಂಧ ಕಲ್ಪಿಸಲು ಮನಸ್ಸು ಒಡಂಬಡದಿದ್ದರೂ ಪ್ರಸನ್ನರಂತಹವರ ‘ಬಯಕೆ’ ಕುರಿತಂತೆ ಸಂಭ್ರಮ ಪಡದೆ ಇರಲು ಸಾಧ್ಯವಿಲ್ಲ, ಅಲವೆ? ನಮ್ಮನ್ನು ಪರೋಕ್ಷವಾಗಿ ಈ ಕೆಲಸಕ್ಕೆ ಉತ್ತೇಜಿಸಿದ ಪ್ರಸನ್ನರವರಿಗೆ ಧನ್ಯವಾದಗಳು.

ಶೇಖರ್‌ಪೂರ್ಣ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

This site uses Akismet to reduce spam. Learn how your comment data is processed.