ಒಂದು ಮುಂಜಾವು

ಒಂದು ಮುಂಜಾವಿನಲಿ ತುಂತುರಿನ ಸೋನೆಮಳೆ
‘ಸೋ’ ಎಂದು ಶ್ರುತಿ ಹಿಡಿದು ಸುರಿಯುತಿತ್ತು;
ಅದಕೆ ಹಿಮ್ಮೇಳವನ ಸೋಸಿ ಬಹ ಸುಳಿಗಾಳಿ
ತೆಂಗು ಗರಿಗಳ ನಡುವೆ ನುಸುಳುತಿತ್ತು.

ಇಳೆವೆಣ್ಣು ಮೈದೊಳೆದು ಮಕರಂದದರಿಶಿನದಿ
ಹೂ ಮುಡಿದು ಮದುಮಗಳ ಹೋಲುತಿತ್ತು;
ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ
ಬಿಳಿಯ ಮೋಡದ ಹಿಂದೆ ಹೊಳೆಯುತಿತ್ತು.

ಹುಲ್ಲೆಸಳು, ಹೂ ಪಕಳೆ, ಮುತ್ತು-ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತಿತ್ತು;
ಕೊರಲುಕ್ಕಿ ಹಾಡುತಿಹ ಚಿಕ್ಕಪಕ್ಕಿಯ ಬಳಗ
‘ಶುಭಮಸ್ತು’ ‘ಶುಭಮಸ್ತು’ – ಎನ್ನುತಿತ್ತು.

ತಳಿರ ತೋರಣದಲ್ಲಿ ಬಳ್ಳಿ ಮಾಡಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತಿತ್ತು;
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣಗುಣಿತ ಹಾಕುತಿತ್ತು.

ಉಷೆಯ ನುಣ್ಗದಪಿನಲಿ ಹರ್‍ಷ ಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತಿತ್ತು;
ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದ ಮನ
ಮುಂಬಾಳ ಸವಿಗನಸ ನೆನೆಯುತಿತ್ತು.
*****