ನಿಮ್ಮೊಡನಿದ್ದೂ ನಿಮ್ಮಂತಾಗದೆ

– ೧ –
ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ, ಈ ನೆಲದಲ್ಲೆ ಬೇರೊತ್ತಿದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

ವೃತ್ತದಲ್ಲಿ ಉನ್ಮತ್ತರಾದ
ನಿಮ್ಮ ಕುಡಿತ ಕುಣಿತ ಕೂಟಗಳು ಕೆಣಕಿ
ಕುಣಿಕೆ ಎಸೆದಿದ್ದರೂ
ಪಂಚೇಂದ್ರಿಯಕ್ಕೆ ಲಗಾಮು ಜಡಿದು ಜಾರದೆ ನಿಮ್ಮತ್ತ
ಸಂಯಮವನ್ನೇ ಪೋಷಿಸಿ ಸಾಕುತ್ತ
ರೇಖೆಯಲ್ಲೇ ದೊಂಬರಾಟ ನಡೆಸುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

– ೨ –

ಒಳಗೊಳಗೇ ಬೇರು ಕೊಯ್ದು
ಲೋಕದೆದುರಲ್ಲಿ ನೀರು ಹೊಯ್ದು
ನನ್ನ ಸಲಹುವ ನಿಮ್ಮ ಕಪಟ ಗೊತ್ತಿದ್ದರೂ
ಗೊತ್ತಿಲ್ಲದಂತೆ ನಟಿಸಿ
ಚಕಾರವೆತ್ತದೆ ನಿಮ್ಮೊಡನೆ ಕಾಫಿ ಹೀರಿ ಪೇಪರೋದಿ ಹರಟಿ
ಬಾಳ ತಳ್ಳುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

ನಿಮ್ಮ ಮಾತುಕತೆಗಳಲ್ಲಿ ಹುದುಗಿದ ಬೆಕ್ಕು
ಸಂಶಯದ ಪಂಜವೆತ್ತಿ
ನನ್ನ ನಂಬಿಕೆ ನೀಯತ್ತು ಹಕ್ಕು
ಕೊನೆಗೆ ಸಾಜಾತನವನ್ನು ಪರಚಿ, ಒತ್ತಿ-
ನೋವಿಗೆ ಕಣ್ಣು ತುಂಬಿದ್ದರೂ,
ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳ
ನನ್ನೆದುರಿನಲ್ಲೇ ತನಿಖೆ ಮಾಡುವ ಕ್ಷಣವನ್ನ
ಹುಸಿ ನಗುತ್ತ ಎದುರಿಸುವುದಿದೆಯಲ್ಲ
ಅದು ಬಲು ಕಷ್ಟದ ಕೆಲಸ.
*****
ಕೀಲಿಕರಣ: ಶ್ರೀನಿವಾಸ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

This site uses Akismet to reduce spam. Learn how your comment data is processed.